ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಚಲ್ಲಘಟ್ಟ ಕಡೆತಯಿಂದ ವೈಟ್‌ಫೀಲ್ಡ್‌ಗೆ ತೆರಳುತ್ತಿದ್ದ ಮೆಟ್ರೋ ರೈಲಿಗೆ ಅಡ್ಡಲಾಗಿ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯಿಂದಾಗಿ ನೇರಳ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲ ಕಾಲ ಸ್ಥಗಿತಗೊಂಡಿದೆ. ಚಲ್ಲಘಟ್ಟ ಮತ್ತು ಮೈಸೂರು ರಸ್ತೆ ನಡುವಿನ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರು ರಸ್ತೆ ಮತ್ತು ವೈಟ್‌ಫೀಲ್ಡ್ ನಡುವೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಯುವಕನ ಮೃತದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಯುವಕನ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಬಿಎಂಆರ್‌ಸಿಎಲ್, “ಮೃತದೇಹವನ್ನು ಹೊರತೆಗೆಯಲಾಗಿದೆ. ರೈಲು ಪುನರಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯ, ಚಲ್ಲಘಟ್ಟ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಪಂತರಪಾಳ್ಯ, ಕೆಂಗೇರಿ ನಿಲ್ದಾಣಗಳಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ” ಎಂದು ತಿಳಿಸಿದೆ.
ಮೆಟ್ರೋ ಹಳಿಗೆ ಜಿಗಿದ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಇತ್ತೀಚೆಗೆ ಪದೇ-ಪದೇ ನಡೆಯುತ್ತಿವೆ. ಇದೇ ವರ್ಷದ ಅಕ್ಟೋಬರ್ನಲ್ಲಿ ವಿಧಾನಸೌಧದ ಡಿ ಗ್ರೂಪ್ ನೌಕರ ವೀರೇಶ್ (35) ಎಂಬವರು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಲಾಗಿತ್ತು.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




