ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪ್ರತಿ ವರ್ಷ ನೀಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಈ ವರ್ಷ ಕಂದಾಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹಾಗೆಯೇ ಇದೇ ವೇಳೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಗೆ 2 ಲಕ್ಷಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಯೋಜನೆ ಕೈಗೊಂಡಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೆಸ್ ಕ್ಲಬ್ ಸದಸ್ಯರ ಬಹುಮತದ ಮೇರೆಗೆ ಈ ಆಯ್ಕೆ ಮಾಡಲಾಗಿದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ತಿಳಿಸಿದೆ.
ಇದನ್ನು ಓದಿದ್ದೀರಾ? 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್
ಈ ಹಿಂದೆ ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ. ಸಿ. ಎನ್. ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತಾರಾಷ್ಟ್ರೀಯ ಕ್ರಿಕೆಟ್ ಪಟು ಅನಿಲ್ ಕುಂಬ್ಳೆರವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಭಿನಂದಿಸಿದೆ.
ಜತೆಗೆ ಹಿರಿಯ ಶಾಸಕ ಬಿ.ಡಿ.ಎ ಅಧ್ಯಕ್ಷರಾದ ಎನ್.ಎ ಹ್ಯಾರಿಸ್ ಮಾಧ್ಯಮ ಕ್ಷೇತ್ರಕ್ಕೆ ಆರೋಗ್ಯ ಸಂಜೀವಿನಿ ಹಾಗೂ ಗ್ರಾಮೀಣ ಬಸ್‌ಪಾಸ್ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆಡಳಿತ ಮಂಡಳಿ ನಿರ್ಧರಿಸಿದೆ.
ಇವರನ್ನು ಡಿಸೆಂಬರ್ 31ರಂದು ಸಂಜೆ 5.00 ಗಂಟೆಗೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಪುಟದ ಅನೇಕ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ತಿಳಿಸಿದೆ.





