ಬೆಂಗಳೂರಿನ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡ ವಿಧಿಸುತ್ತಿದೆ. ಆ ಶಾಲೆಯ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಶ ‘ಕೃಷ್ಣಾ’ ಕಟ್ಟಡ ಇರುವ ಕುಮಾರಕೃಪಾ ರಸ್ತೆಯಲ್ಲಿಯೇ ಸಿಂಧಿ ಖಾಸಗಿ ಪ್ರೌಢಶಾಲೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ, ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯು ದಂಡ ವಿಧಿಸುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ, ಡಾ. ಬಿಳಿಮಲೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ. “ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡುವ ಕಾರಣಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೆೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳಿವೆ. ಶಾಲೆಯೊಂದು ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುತ್ತಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.
“ಕನ್ನಡದ ಕುರಿತು ಖಾಸಗಿ ಶಾಲೆಗಳು ಲಘು ಧೋರಣೆ ತಳೆಯುತ್ತಿವೆ. ಇದು ನಕಾರಾತ್ಮಕ ಬೆಳವಣಿಗೆಯಾಗಿದೆ. ಇಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಕನ್ನಡದ ನೆಲದಲ್ಲಿ ಕನ್ನಡಕ್ಕೆ ಪರಕೀಯ ಸ್ಥಾನ ಸೃಷ್ಠಿಯಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಸರ್ಕಾರವು ಕನ್ನಡ ಪರವಾದ ನಿಲುವು ಹೊಂದಿದೆ ಎಂಬುದನ್ನು ಸಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕು. ಕನ್ನಡವನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಬೇಕು. ಶಾಲೆಗೆ ನೀಡಲಾಗಿರುವ ಎನ್‌ಒಸಿಯನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದೆ.
“ಸಿಂಧಿ ಶಾಲೆಯ ವಿರುದ್ಧ ತೆಗೆದುಕೊಳ್ಳುವ ಕ್ರಮವು ರಾಜ್ಯದಲ್ಲಿರುವ ಇತರ ಶಿಕ್ಷಣ ಸಂಸ್ಥೆಗಳಿಗೆ ಪಾಠವಾಗುವಂತೆ ಮಾಡಬೇಕು. ಕನ್ನಡ ಭಾಷಣೆಯ ಹಿತದೃಷ್ಠಿಯಿಂದ ಶಾಲೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ” ಎಂದು ಅವರು ತಿಳಿಸಿದ್ದಾರೆ.




