ರಾಜ್ಯಾದ್ಯಂತ ಶನಿವಾರದಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ಪರೀಕ್ಷೆಗಳು ಅರಂಭವಾಗಲಿವೆ. ಪರೀಕ್ಷೆಗಳು ಮಾರ್ಚ್ 20ರಂದು ಅಂತ್ಯಗೊಳ್ಳಲಿವೆ. ಈ ಬಾರಿ ಒಟ್ಟು 7,13,812 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಒಟ್ಟು 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ, 6,61,474 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, 34.071 ವಿದ್ಯಾರ್ಥಿಗಳು ಪುನರಾವರ್ತಿತ ಅಭ್ಯರ್ಥಿಗಳಾಗಿದ್ದಾರೆ. ಅಲ್ಲದೆ, 18,317 ಖಾಸಗಿ ಅಭ್ಯರ್ಥಿಗಳೂ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ವಿವರಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತಮ್ಮ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ತಮ್ಮ ಸ್ಥಳಗಳಿಗೆ ಪ್ರಯಾಣಿಸಲು ಉಚಿತ ಪ್ರಯಾಣ ಒದಗಿಸುವುದಾಗಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಘೋಷಿಸಿವೆ.
ಇನ್ನು, ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಹಲವಾರು ಕ್ರಮಗಳನ್ನು ಪರೀಕ್ಷಾ ಮಂಡಳಿ ಕೈಗೊಂಡಿದೆ. ನಕಲು ಮಾಡುವುದನ್ನು ತಡೆಯಲು ನಾನಾ ಕಟ್ಟುಪಾಡುಗಳನ್ನು ವಿಧಿಸಿದೆ. ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾ ಮೇಲ್ವಿಚಾರಕರು ಮತ್ತು ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್‌ಗಳ ಬಳಿಕೆ, ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಸಮಯದಲ್ಲಿ ಅನುಸರಿಸಬೇಕಾದ ಮಂಡಳಿ ನೀಡಿರುವ ಸೂಚನೆಗಳು;
1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್‌ಗಳನ್ನು ಬಳಸುವಂತಿಲ್ಲ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳ ಬಳಕೆ ನಿಷೇಧ
4) ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ನಿಷೇಧ
5) ಪರೀಕ್ಷಾ ಕೇಂದ್ರದ ಸುತ್ತಲಿನ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ಮತ್ತು ಮಾರಕ ಆಯುಧಗಳನ್ನು ಬಳಸುವಂತಿಲ್ಲ
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಕೃತ್ಯಗಳನ್ನು ಮಾಡುವಂತಿಲ್ಲ
7) ಪರೀಕ್ಷೆ ಪ್ರಾರಂಭವಾಗುವ ಮೊದಲಿನ ಒಂದು ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವಂತಿಲ್ಲ.
8) ಪರೀಕ್ಷಾ ಕೇಂದ್ರಗಳ ಬಳಿ ಧ್ವನಿವರ್ಧಕ ಬಳಕೆಯನ್ನು ನಿಷೇಧ.




