ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರರಿಗೆ ಮನೆಯಲ್ಲಿ ತಯಾರಿಸಿದ ಊಟ ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಜೈಲಿನಲ್ಲೇ ತಯಾರಿಸುವ ಆಹಾರವನ್ನೇ ಈ ಆರೋಪಿಗಳಿಗೂ ನೀಡಬೇಕೆಂದು ಸೂಚಿಸಿದೆ.
ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಮನೆ ಊಟ ನೀಡುವಂತೆ ವಿಚಾರಣಾ ನ್ಯಾಯಾಲಯವು ಬೆಂಗಳೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, “ವಿಚಾರಣಾ ನ್ಯಾಯಾಲಯವು ಜೈಲು ನಿಯಮಗಳ ಅಡಿಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ. ಈ ಆದೇಶವು ಸುಪ್ರೀಂ ಕೋರ್ಟ್‌ನ ತೀರ್ಪಿಗೆ ವಿರುದ್ಧವಾಗಿದೆ” ಎಂದು ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ರಾಜ್ಯ ಸಾರ್ವಜನಿಕ ಅಭಿಯೋಜಕ ಬಿ.ಎನ್ ಜಗದೀಶ್, “2025ರ ಡಿಸೆಂಬರ್ 29ರಂದು ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ, ಆರ್ ನಾಗರಾಜ ಹಾಗೂ ಎಂ ಲಕ್ಷ್ಮಣ್ ಮೌಖಿಕ ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಮನೆಗಳಲ್ಲಿಯೇ ತಯಾರಿಸಿದ ಊಟವನ್ನು ತರಿಸಿಕೊಳ್ಳಲು ನ್ಯಾಯಾಧೀಶರಿಂದ ಅನುಮತಿ ಕೋರಿದ್ದಾರೆ. ಅವರ ಮೌಖಿಕ ಹೇಳಿಕೆಯನ್ನು ಪರಿಗಣಿಸಿ, ಆರೋಪಿಗಳಿಗೆ ಮನೆ ಊಟ ನೀಡುವಂತೆ ವಿಚಾರಣಾ ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿದೆ. ಆದರೆ, ಈ ಪ್ರಕರಣದಲ್ಲಿ ಆರೋಪಿಗಳಿಗೆ ಯಾವುದೇ ವಿಶೇಷ ಸೌಲಭ್ಯ ನೀಡದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.
“ವೈದ್ಯಕೀಯ ಅಧಿಕಾರಿಗಳು ಸೂಚಿಸದ ಹೊರತು, ರಾಜ್ಯದ ಯಾವುದೇ ಕೈದಿಗೆ ಮನೆಯಲ್ಲಿ ಬೇಯಿಸಿದ ಆಹಾರವನ್ನು ಒದಗಿಸಲು ಅವಕಾಶ ನೀಡಲಾಗುವುದಿಲ್ಲ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಜೈಲು ಆಹಾರಕ್ಕೆ 4-ಸ್ಟಾರ್ ದರ್ಜೆಯ ಪ್ರಮಾಣಪತ್ರವನ್ನು ನೀಡಿದೆ. ಹೀಗಾಗಿ, ವಿಚಾರಣಾ ನ್ಯಾಯಾಲಯವು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ” ಎಂದು ವಾದಿಸಿದರು.
ವಾದವನ್ನು ಆಲಿಸಿದ ನ್ಯಾಯಾಲಯವು, “ಆರೋಪಿಗಳಿಗೆ ಜೈಲಿನ ಆವರಣದಲ್ಲಿ ವಿಶೇಷ ಅಥವಾ 5 ಸ್ಟಾರ್ ಸೌಲಭ್ಯ ನೀಡುವಲ್ಲಿ ಸಹಕಾರ ನೀಡಿದ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೆಲವು ಕೈದಿಗಳಿಗೆ, ಅವರು ವಿಚಾರಣಾಧೀನ ಕೈದಿಗಳಾಗಿದ್ದರೂ, ವಿಶೇಷ ಆಹಾರವನ್ನು ಒದಗಿಸುವುದು ಕಾನೂನಿನ ಉಲ್ಲಂಘನೆಯಾಗುತ್ತಿರುತ್ತದೆ ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಆರೋಪಿಗಳಿಗೆ ಮನೆ ಊಟದ ಸೌಲಭ್ಯ ನೀಡಲಾಗುವುದಿಲ್ಲ” ಎಂದು ಹೇಳಿದೆ.




