ಸಿಎಂ ಸಿದ್ದರಾಮಯ್ಯ ಅವರ ಜೊತೆ ದೆಹಲಿಗೆ ಹೋಗಿ ಸರ್ವಪಕ್ಷ ಸಂಸದರ ಸಭೆ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಡಿ.8 ರಂದು ದೆಹಲಿಗೆ ಹೋಗಿ ವಾಪಸ್ಸಾಗಬೇಕು ಎಂದು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದಲ್ಲಿ ಸಿದ್ದರಾಮಯ್ಯ ಅವರ ಜೊತೆ ಉಪಾಹಾರ ಕೂಟದ ಬಳಿಕ ಮಾಧ್ಯಮಗಳ ಜತೆ ಮಾತನಾಡಿ, “ಮೇಕೆದಾಟು ವಿಚಾರವಾಗಿ ನ್ಯಾಯಾಲಯದ ತೀರ್ಪು ಬಂದಿದ್ದು, ಮೆಕ್ಕೆಜೋಳ ದರ ವಿಚಾರ, ಕೇಂದ್ರ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಅನುದಾನ ಬಾರದಿರುವ ವಿಚಾರವಾಗಿ ಸಂಸದರ ಜತೆ ಚರ್ಚೆ ಮಾಡಿ ಅವರಿಗೆ ಜವಾಬ್ದಾರಿ ನೀಡಬೇಕಾಗಿದೆ. ಈ ಸಭೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನು ಹಾಗೂ ಜೆಡಿಎಸ್ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.
“ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿಗಳನ್ನು ಉಪಾಹಾರ ಕೂಟಕ್ಕೆ ಬರುವಂತೆ ಮೊದಲು ಕರೆದಿದ್ದೆ. ಅವರು ಮೊದಲು ನೀವೇ ನಮ್ಮ ಮನೆಗೆ ಬನ್ನಿ, ಆಮೇಲೆ ಬರುತ್ತೇನೆ ಎಂದಿದ್ದರು. ಅದರಂತೆ ನಾನು ಅವರ ಮನೆಗೆ ಹೋಗಿದ್ದೆ. ಇಂದು ನಮ್ಮ ಮನೆಗೆ ಆಹ್ವಾನಿಸಿದ್ದೆ. ನಾವಿಬ್ಬರೂ ಬಹಳ ಸಂತೋಷದಿಂದ ಉಪಹಾರ ಸೇವಿಸಿದ್ದೇವೆ. ಈ ವೇಳೆ ರಾಜಕೀಯವಾಗಿಯೂ ಚರ್ಚೆ ಮಾಡಿದ್ದೇವೆ. ಪದವೀಧರ ಹಾಗೂ ಶಿಕ್ಷಕರ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ನಾವಿಬ್ಬರೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರದ ವಿಚಾರವನ್ನು ಚರ್ಚೆ ಮಾಡಿದ್ದೇವೆ” ಎಂದು ಹೇಳಿದರು.
“ಅಧಿವೇಶನದಲ್ಲಿ ಯಾವ ರೀತಿ ಹೋರಾಟ ಮಾಡಬೇಕು, ಶಾಸಕರಿಗೆ ನೀಡಬೇಕಾದ ಸಂದೇಶಗಳು, ವಿರೋಧ ಪಕ್ಷಗಳು ಯಾವೆಲ್ಲಾ ವಿಚಾರ ಪ್ರಸ್ತಾಪಿಸಬಹುದು ಎಂದು ಚರ್ಚೆ ಮಾಡಿದ್ದೇವೆ. ವಿರೋಧ ಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರು, ನಾವು ಒಂದೇ ಧ್ವನಿಯಲ್ಲಿ ಎದುರಿಸಲು ಸಿದ್ಧರಿದ್ದೇವೆ” ಎಂದರು.
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದನದಲ್ಲಿ ನಿಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಾರಂತೆ ಎಂದು ಕೇಳಿದಾಗ, “ಅವರು ಮಾಡಲಿ, ಯಾವ ವಿಚಾರಕ್ಕೆ ಮಾಡುತ್ತಾರೆ? ಅವರದ್ದು ಖಾಲಿ ಟ್ರಂಕ್” ಎಂದು ಕುಟುಕಿದರು.
ಸಮಯ ಸಿಕ್ಕರೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಅವರು ಕರೆದರೆ ಹೋಗಿ ಭೇಟಿ ಮಾಡುತ್ತೇವೆ” ಎಂದು ತಿಳಿಸಿದರು.





