ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಯೋಚನೆ ನಮ್ಮ ಪಕ್ಷಕ್ಕೆ ಇಲ್ಲ. ಯಾವುದೇ ಕಾರಣಕ್ಕೂ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ” ಎಂದರು.
“ಈ ಸರ್ಕಾರ ಐದು ವರ್ಷಗಳ ಕಾಲ ತಮ್ಮ ಅವಧಿಯನ್ನು ಪೂರ್ಣಗೊಳಿಸಬೇಕು. ಇದು ನಮ್ಮ ಆಶಯ ಕೂಡ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದರೂ, ಜನಾದೇಶಕ್ಕೆ ಗೌರವ ನೀಡಬೇಕು” ಎಂದು ಹೇಳಿದರು.
ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ, ಬಿ ವೈ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿರುವ ಯತ್ನಾಳ್ ಹೇಳಿಕೆಯನ್ನು ಪತ್ರಕರ್ತರು ಜೋಶಿ ಮುಂದಿಟ್ಟಾಗ, “ಈ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಬಿಜೆಪಿ ನಿಲುವು ಸ್ಪಷ್ಟವಿದೆ” ಎಂದರು.





