ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ಫಾರ್ಮ್‌ಹೌಸ್ ಮತ್ತು ಬೆಂಗಳೂರಿನ ನಿವಾಸದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಘೋಷಿಸಿದ್ದು ತೀರ್ಪು ನಾಳೆ ಪ್ರಕಟವಾಗಲಿದೆ.
ಕೆಲವು ತಾಂತ್ರಿಕ ವಿಚಾರಗಳಲ್ಲಿ ಸ್ಪಷ್ಟನೆ ಕೋರಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಜುಲೈ 30ರಂದು ಪ್ರಕಟಿಸಬೇಕಿದ್ದ ತೀರ್ಪನ್ನು ಇಂದಿಗೆ(ಆಗಸ್ಟ್1) ಮುಂದೂಡಿದ್ದರು.
ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಈಗಾಗಲೇ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ಬಾರಿ ಜಾಮೀನು ಅರ್ಜಿ ವಜಾಗೊಂಡಿದೆ. ಅದಕ್ಕೂ ಮುನ್ನ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಸಾಮಾಜಿಕ ಮಾಧ್ಯಮ ಸೇರಿದಂತೆ ಹಲವು ಕಡೆಗಳಲ್ಲಿ ಹಲವು ಮಹಿಳೆಯರ ಲೈಂಗಿಕ ದೌರ್ಜನ್ಯದ 2,900ಕ್ಕೂ ಅಧಿಕ ವಿಡಿಯೋಗಳು ಹರಿದಾಡಿವೆ. ಈ ಸಂಬಂಧ ಕಳೆದ ವರ್ಷ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಗಿದ್ದಾರೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ರೇವಣ್ಣ ಕುಟುಂಬದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಮಹಿಳೆ ದೂರು ದಾಖಲಿಸಿದ್ದರು. ಪ್ರಜ್ವಲ್ ರೇವಣ್ಣ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಅತ್ಯಾಚಾರದ ಬಗ್ಗೆ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ.





