ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಕೇಳಿಬಂದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ನೋಟಿಸ್ ಹಿನ್ನೆಲೆಯಲ್ಲಿ ಶಾಂತಿನಗರದ ಇ.ಡಿ. ಕಚೇರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ದಿನೇಶ್ ಕುಮಾರ್ ಅವರನ್ನು ಇ.ಡಿ. ಅಧಿಕಾರಿಗಳು ಕೆಲ ಹೊತ್ತು ವಿಚಾರಣೆ ನಡೆಸಿದ ಬಳಿಕ ಸಂಜೆ ಬಂಧಿಸಿದ್ದಾರೆ. ಬಳಿಕ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ.
ನಂತರ ವಿಚಾರಣೆ ನಡೆಸಿದ ನ್ಯಾಯಾಧೀಶರು ಇ.ಡಿ. ಅಧಿಕಾರಿಗಳ ಮನವಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ದಿನೇಶ್ ಕುಮಾರ್ ಅವರನ್ನು ಇ.ಡಿ. ವಶಕ್ಕೆ ನೀಡಿದ್ದಾರೆ.
ದಿನೇಶ್ ಕುಮಾರ್ ಅವರು 2022ರಲ್ಲಿ ಮುಡಾ ಆಯುಕ್ತರಾಗಿದ್ದರು. ಇವರ ಅವಧಿಯಲ್ಲಿ 50:50ರ ಅನುಪಾತದಲ್ಲಿ ನೂರಾರು ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿದ ಆರೋಪ ಕೇಳಿ ಬಂದಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೋಟ್ಯಂತರ ರೂ. ಮೌಲ್ಯದ 14 ಬದಲಿ ನಿವೇಶನ ಕೊಡಿಸುವಲ್ಲಿ ಪ್ರಭಾವ ಬೀರಿರುವ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಅಕ್ರಮ ಹಣ ವರ್ಗಾಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಇ.ಡಿ. ಅಧಿಕಾರಿಗಳು, 2024ರ ಅ. 28ರಂದು ದಿನೇಶ್ ಕುಮಾರ್ ಅವರ ಬಾಣಸವಾಡಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ ಶೋಧಿಸಿದ್ದರು. ಈ ವೇಳೆ ದಿನೇಶ್ ಕುಮಾರ್ ವಾಯು ವಿಹಾರಕ್ಕೆ ತೆರಳಿದ್ದರು. ಶೋಧ ಕಾರ್ಯದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ಹಿನ್ನೆಲೆಯಲ್ಲಿ ನ. 9 ರಂದು ಇ.ಡಿ. ಅಧಿಕಾರಿಗಳ ಎದುರು ಹಾಜರಾಗಿದ್ದ ದಿನೇಶ್ ಕುಮಾರ್ ವಿಚಾರಣೆ ಎದುರಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಕೇಳಿಬಂದ ಬೆನ್ನಲ್ಲೇ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ವರ್ಗಾಯಿಸಿತ್ತು. ಸರ್ಕಾರದ ಈ ಆದೇಶವು ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿತ್ತು. ಬಳಿಕ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ದಿನೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ತನಿಖಾಧಿಕಾರಿ ಎಸ್‌ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೂ ನಿವೃತ್ತ ನ್ಯಾಯಾಧೀಶ ದೇಸಾಯಿ ಸಮಿತಿಯ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ.





