ರಾಜ್ಯದಲ್ಲಿ ಆಗಸ್ಟ್ 5ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಅತಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಭಾರಿ ಮಳೆ ಮುನ್ಸೂಚನೆ: 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
ಇನ್ನು ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಮುಂದಿನ 7 ದಿನಗಳ#ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) August 3, 2025
ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ಆಗಸ್ಟ್ 5 ರಿಂದ ಅತಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆ, pic.twitter.com/P87lM2VAwH
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮೀಣ, ತುಮಕೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರದ ಹೆಚ್ಚಿನ ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 4ರಿಂದ 6ರವರೆಗೆ ಕರಾವಳಿಯಲ್ಲಿ ಗಂಟೆಗೆ ಗಂಟೆಗೆ 40-50 ಕಿ.ಮೀ.ನಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.





