ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ವಿಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್,ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಲಾಗಿದ್ದ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಗೂ ಅಡಚಣೆಯಾಗಿದೆ. ಆದಾಗ್ಯೂ, ಕಾರ್ಯಾಚರಣೆಯನ್ನು ಎಸ್‌ಐಟಿ ಮುಂದುವರೆಸಿದೆ.
ಈ ಲೇಖನ ಓದಿದ್ದೀರಾ?: ಮಾಲೆಗಾಂವ್ ಸ್ಫೋಟ | ಪ್ರಮುಖ ಸಾಕ್ಷಿಗಳನ್ನೇ ಕೈಬಿಟ್ಟಿದ್ದ ಪ್ರಾಸಿಕ್ಯೂಷನ್; ಅನುಮಾನಗಳಿದ್ದರೂ ಮುಗಿದು ಹೋದ ಪ್ರಕರಣ
ಇನ್ನು, ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ನಗರದಲ್ಲಿಯೂ ಸಾಧಾರಣ ಮಳೆಯಾಗುತ್ತಿದೆ. ಆದರೂ, ವಾಹನ ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ. ಉದ್ಯೋಗಕ್ಕೆ ತೆರಳುವ, ಕೂಲಿ ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ತೊಂದರೆ ಉಂಟಾಗಿದೆ.




