ಇತ್ತೀಚಿಗಷ್ಟೇ ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಈಗ ಕರಾವಳಿ ಕರ್ನಾಟಕ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಬಿಜಾಪುರ, ಹಾವೇರಿ, ಕೋಲಾರ, ಧಾರಾವಾಡ, ಗದಗ ಮೊದಲಾದೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಇಂದು, ನಾಳೆ ಮತ್ತು ಮಾರ್ಚ್ 25ರಿಂದ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನು ಓದಿದ್ದೀರಾ? ಹವಾಮಾನ ವರದಿ | ಕರ್ನಾಟಕದಲ್ಲಿ ಇನ್ನೂ 6 ದಿನ ಭಾರೀ ಮಳೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ.

ಇಂದು ಉತ್ತರ ಒಳನಾಡಿನ ಕೊಪ್ಪಳ, ಗದಗ, ಧಾರವಾಡ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಾಳೆ (ಮಾರ್ಚ್ 21) ಬೆಳಗಾವಿ, ಧಾರವಾಡ, ಹಾವೇರಿ ಗದಗದ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಶುಕ್ರವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ಹಾಸನ, ಕೊಡಗು, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯದ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶನಿವಾರ ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಉಳಿದೆಡೆ ಒಣ ಹವೆ ಮುಂದುವರೆಯಲಿದೆ.





