ಒಳಮೀಸಲಾತಿ ಹೋರಾಟಗಾರರ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮೇಜರ್ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಿದೆ. ಒಳಮೀಸಲಾತಿ ಜಾರಿಯಲ್ಲಿ ಗೊಂದಲಗಳು ಏರ್ಪಟ್ಟಿದ್ದು, ಇದರಲ್ಲಿ ಮಣಿಮಣ್ಣನ್ ಪಾತ್ರ ದೊಡ್ಡದಿದೆ ಎಂದು ಹೋರಾಟಗಾರರು ಆರೋಪಿಸಿದ್ದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ಯು ಹಲವು ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ಬೇರುಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂಬ ಆಗ್ರಹ ಪ್ರಮುಖವಾಗಿತ್ತು. ಹೋರಾಟದ ಫಲವಾಗಿ ಮಣಿವಣ್ಣನ್ ಅವರನ್ನು ಅಂತಿಮವಾಗಿ ಎತ್ತಂಗಡಿ ಮಾಡಲಾಗಿದೆ. ಮಣಿಮಣ್ಣನ್ ಸ್ಥಾನಕ್ಕೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದರ ಜೊತೆಗೆ ಇನ್ನು ಕೆಲವು ಐಎಎಸ್ ಅಧಿಕಾರಿಗಳ ಸ್ಥಾನಪಲ್ಲಟ ಮಾಡಲಾಗಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ವೆಂಕಟ್ ರಾಜಾ ಅವರನ್ನು ತೆರವು ಮಾಡಲಾಗಿದೆ.
ಪೋಸ್ಟಿಂಗ್‌ಗಾಗಿ ಕಾಯುತ್ತಿರುವ ಆರ್. ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಉಜ್ವಲ್ ಕುಮಾರ್ ಘೋಷ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಡಾ. ಬಿ.ಸಿ.ಸತೀಶ ಅವರನ್ನು ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಎಂ.ಎಸ್.ದಿವಾಕರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಎಂ.ಪಿ.ಮುಲ್ಲೈ ಮುಹಿಲನ್ ಅವರನ್ನು ಬಿಡುಗಡೆ ಮಾಡಲಾಗಿದೆ. ದಿವಾಕರ ಅವರಿಗೆ ಬೆಂಗಳೂರಿನ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.





