ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್.ಎಸ್.ಎ.ಲ್.ಸಿ. ಮತ್ತು ಪಿ.ಯು.ಸಿ.ಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗವು (ಹೈದರಾಬಾದ್ ಕರ್ನಾಟಕ) ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಹೊಂದಿ, ಭಾರತಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ‘ಕಲ್ಯಾಣ ಕರ್ನಾಟಕ ಉತ್ಸವ’ಕ್ಕೆಚಾಲನೆ ನೀಡಿ ಮಾತನಾಡಿದರು.
“ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಹೆಚ್ಚಳ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣ ಹೀಗೆ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ ಇದೂವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ” ಎಂದು ಹೇಳಿದರು.
“ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ 250 ಕೋಟಿ ರೂ.ಗಳನ್ನು ಒದಗಿಸಿದ್ದೇವೆ.
“ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲ್ಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ ಹುದ್ದೆಗಳ ಸಮೇತ ಅಧಿಸೂಚನೆ ಹೊರಡಿಸುತ್ತೇವೆ” ಎಂದು ಹೇಳಿದರು.





