ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಇತ್ತೀಚೆಗೆ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್ಎಸ್ ಕುರಿತು ಮುಖ್ಯಮಂತ್ರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ “ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!
ಆದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.
ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಹಾಗೂ ಇದನ್ನು ಉಲ್ಲಂಘಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.





