ಮುಖ್ಯಮಂತ್ರಿಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ದಿನ.ಕಾಮ್ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾಧ್ಯಮಗಳ ಮುಂದೆ ಕಾರಣಗಳನ್ನು ಬಹಿರಂಗ ಪಡಿಸಲು ಆಗುವುದಿಲ್ಲ. ಪತ್ರದಲ್ಲಿ ಎಲ್ಲ ಕಾರಣಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ. ರಾಜೀನಾಮೆ ನೀಡಬೇಕು ಎಂದು ಬಹಳ ಹಿಂದೆಯೇ ನಿರ್ಧರಿಸಿದ್ದೆ. ಈಗ ಕಾಲ ಕೂಡಿಬಂದಿದೆ” ಎಂದು ಹೇಳಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿದ್ದ ಹಿರಿಯ ಶಾಸಕರಿಗೆ ಸಚಿವ ಸ್ಥಾನಮಾನದ ಕೆಲ ಹುದ್ದೆಗಳನ್ನು ನೀಡಲಾಗಿತ್ತು. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಮತ್ತು ಶಾಸಕ ಬಿಆರ್ ಪಾಟೀಲ್ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಬಿ.ಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನಿಡಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಬಿ.ಆರ್ ಪಾಟೀಲ್ ಅವರು ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡದ ಬಗ್ಗೆ ಅಸಮಾಧಾನಗಳನ್ನು ವ್ಯಕ್ತಪಡಿಸುತ್ತಲೇ ಬಂದಿದ್ದರು. ಈಗ ದಿಢೀರ್ ಎಂದು ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.





