ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅದರಲ್ಲೂ ಪೋಲೀಸಿನವರೇ ಇದ್ದಾರೆ” ಎಂದರು.
ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿಗಳಿಗೆ ಇವಿಎಂ ಬದಲಿಗೆ ಮತ ಪತ್ರ (ಬ್ಯಾಲೆಟ್) ಮೂಲಕ ಚುನಾವಣೆ ನಡೆಸುವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ‘ಮತಕಳ್ಳತನ’ದ ಆರೋಪ ಹೊರಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪಕ್ಷದ ನೇತಾರನ ಮಹಾ ಸಮರಕ್ಕೆ ಬೆಂಬಲ ಸೂಚಿಸುವ ರೀತಿಯೊಳಗೆ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅಥವಾ ಕೇಂದ್ರ ಚುನಾವಣಾ ಆಯೋಗದ ಅನುಮತಿಯೇ ಬೇಕಿಲ್ಲ.





