ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಹೊರಡಿಸಲಾಗಿದ್ದ ಆದೇಶಕ್ಕೆ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನೂ ಪೀಠವು ಗುರುವಾರ ವಜಾಗೊಳಿಸಿದೆ.
ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಅಕ್ಟೋಬರ್ 28ರಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಮತ್ತು ಗೀತಾ ಕೆ.ಬಿ ಅವರ ಪೀಠವು ಮೇಲ್ಮನವಿಯನ್ನು ವಜಾಗೊಳಿಸಿದೆ. ತಡೆಯಾಜ್ಞೆ ತೆರವಿಗಾಗಿ ಏಕಸದಸ್ಯ ಪೀಠದ ಎದುರೇ ಮನವಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಘ-ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಧಾರವಾಡ ಪೀಠವು ಅಕ್ಟೋಬರ್ 28ರದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.




