ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಟೀಕಿಸುತ್ತಿದ್ದಾರೆ. ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ಷೇಪಿಸಿದರು.
ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ ಸಂದರ್ಭದಲ್ಲಿ ಕೇಂದ್ರವನ್ನು ದೂರುತ್ತಾರೆ. ಅಲ್ಲದೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವುದರಲ್ಲೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ಇದರ ನಡುವೆ, ತಾವು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತೇ ಬಿಟ್ಟಿದ್ದಾರೆ” ಎಂದು ಕುಟುಕಿದರು.
“ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು” ಎಂದು ಆಗ್ರಹಿಸಿದರು.
“ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ” ಎಂದು ತಿಳಿಸಿದರು.





