ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; “ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ” ಎಂದು ಅಭಿಪ್ರಾಯಪಟ್ಟರು.
ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕಲಹದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, “ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ. ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ” ಎಂದರು.
“ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ” ಎಂದು ಹೇಳಿದರು.
“ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ” ಎಂದು ವಾಗ್ದಾಳಿ ನಡೆಸಿದರು.
“ಈ ಸರ್ಕಾರಕ್ಕೆ ರಾಜ್ಯದ ಜನ 140 ಸ್ಥಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಟ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ” ಎಂದು ಕಿಡಿಕಾರಿದರು.
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿವೆ ಎಂದು ಸಿಎಂ ಹೇಳಿರುವ ಬಗ್ಗೆ ಕೆಂಡ ಕಾರಿದ ಸಚಿವ ಕುಮಾರಸ್ವಾಮಿ ಅವರು, “ಸಿದ್ದರಾಮಯ್ಯ ಅವರು ಒಬ್ಬರೇ ಸತ್ಯ ಹರಿಶ್ಚಂದ್ರ. ಪಾಪ.. ಸತ್ಯ ಹರಿಶ್ಚಂದ್ರ ಕಾಡಿಗೆ ಹೋಗಬೇಕಾದರೆ ಸಿದ್ದರಾಮಯ್ಯನ ಹುಂಡಿ ಮೇಲೆ ಹೋಗಿರಬೇಕು. ಅದಕ್ಕೆ ಸಿದ್ದರಾಮಯ್ಯ ಹೀಗೆ ಹೇಳುತ್ತಿರಬಹುದು” ಎಂದು ಲೇವಡಿ ಮಾಡಿದರು.





