ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿರುವುದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ವಿಶ್ವ ದಾಖಲೆ ದಾಖಲೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಅವರಿಗೆ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ತೋರಿಸಿ ಸಂತಸದ ಕ್ಷಣವನ್ನು ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಜೆ ಬ್ಯಾನ್‌ನಿಂದ ಕಲೆಗೆ ಪ್ರೋತ್ಸಾಹ, ಕೋಮು ಉದ್ವಿಗ್ನತೆಗೆ ಕಡಿವಾಣ
ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಎಸ್ಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಹಾಗೆಯೇ ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.





