ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, “ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿ ಇದ್ದಾರೆ” ಎಂದು ಟೀಕಿಸಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು” ಎಂದರು.
“ವಿಧಾನಸೌಧ ಭಯೋತ್ಪಾದಕರ ಬಗ್ಗೆ ರಾಜ್ಯದ ಜನ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂಥವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.
ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿ
“ಜೈಲು ನಿರ್ವಹಣೆಯಲ್ಲಿ ಪದೇಪದೆ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹೇಳುತ್ತಾರೆ. ಆದರೆ ಇವರಿಗೇನಿದೆ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಸಿಎಂ ಅವರಿಗೆ ದೀರ್ಘ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.
ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ
ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ, “ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನ ಇಲ್ಲಿಗೆ ಬರುತ್ತಾರೆ. ಅನೇಕ ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಣ್ಣತನ ತೋರುವ ಅಗತ್ಯ ಇಲ್ಲ. ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡುವ ಮಾಡಿಕೊಡಬೇಕು. ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ” ಎಂದು ಅಭಿಪ್ರಾಯಪಟ್ಟರು.





