ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ಒಟ್ಟು 4,084 ಕೋಟಿ ರೂ. ಬಜೆಟ್ ಹಂಚಿಕೆ ಮಾಡಿದ್ದಾರೆ.
ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು ಎಂದು ತಮ್ಮ 17ನೇ ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಕೃಷಿಗೆ 8,363 ಕೋಟಿ ರೂ.; ರೈತರಿಗೆ ಸಿಕ್ಕಿದ್ದೇನು?
ಇನ್ನು ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ.
ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು (Mariculture) ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.





