ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಈ ಕುರಿತು ಉತ್ತರಿಸಲಿ. ಸೋಮವಾರದ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್ ಆಗುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ತನಿಖೆ ಮಾಡಲಿ. ಅಮಾಯಕರ ಜೀವಹಾನಿ ಬೇಸರದ ಸಂಗತಿ” ಎಂದು ವಿಷಾದ ವ್ಯಕ್ತಪಡಿಸಿದರು.
15 ರಂದು ದೆಹಲಿಗೆ
“ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ಹೈಕಮಾಂಡ್ ಸಮಯ ಕೊಟ್ಟರೆ ಭೇಟಿ ಆಗುವೆ. ಇನ್ನೂ ಹೈಕಮಾಂಡ್ ಸಮಯ ಕೇಳಿಲ್ಲ” ಎಂದು ತಿಳಿಸಿದರು.
ಮಾನವ-ಹುಲಿ ಸಂಘರ್ಷದ ಬಗ್ಗೆ ಗಂಭೀರ ಚರ್ಚೆ
“ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ? ವೈಜ್ಞಾನಿಕ ಕಾರಣ ನೀಡಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಾಂಟೆನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ” ಎಂದು ಹೇಳಿದರು.
“ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿದೆ. ಇದಕ್ಕೆ ಕಾರಣ ಕೊಡಲು ಅಧಿಕಾರಿಗೆ ಸೂಚಿಸಿದ್ದೇನೆ” ಎಂದರು.





