ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆ ತೋರಿಸುತ್ತಿಲ್ಲ ಎಂದು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಆಕ್ಷೇಪಿಸಿ, ಅಧಿಕಾರಿಗಳು ತಮ್ಮ ವಿಳಂಬ ಧೋರಣೆಯನ್ನು ಬದಿಗಿರಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ಅನುಚ್ಛೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ರಚಿಸಲಾಗಿರುವ ಸಂಪುಟ ಉಪಸಮಿತಿಯ ಅಧ್ಯಕ್ಷರಾದ ಪ್ರಿಯಾಂಕ್ ಖರ್ಗೆ ಸಂಪುಟ ಉಪ ಸಮಿತಿಯ ಇತರ ಸದಸ್ಯರೊಂದಿಗೆ ಸಭೆ ನಡೆಸಿ, ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಬಂಧ ಚರ್ಚೆ ನಡೆಸಿ, ಅವುಗಳನ್ನು ಶೀಘ್ರವಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಬಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತಾ ಪಟ್ಟಿ ಪ್ರಕಟಿಸಲು ಸಚಿವ ಸಂಪುಟ ಉಪ ಸಮಿತಿಯು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಗೆ ಈಗಾಗಲೆ ಸೂಚಿಸಿದ್ದು, ಅದರಂತೆ ಒಂದೇ ಜೇಷ್ಠತಾ ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದು ಸಂಪುಟ ಉಪಸಮಿತಿ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಏಪ್ರಿಲ್ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಅಧಿಕಾರಿಗಳು ಸಂಪುಟ ಉಪ ಸಮಿತಿಯ ಮುಂದೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ, 5000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, 4193 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ, ಈ ಪೈಕಿ 3837 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂವಿಧಾನ ಸಮರ್ಪಣೆ- ಬಿಜೆಪಿ ಆಡುವುದೊಂದು, ಮಾಡುವುದು ಮತ್ತೊಂದು!
ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿ ಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಪೂರ್ಣ ವಿವರಗಳನ್ನು ಒಂದು ವಾರದ ಒಳಗಾಗಿ ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚಿದರು.
ಸಭೆಯಲ್ಲಿ ಸಂಪುಟ ಉಪಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಬೋಸರಾಜು, ಪೌರಾಡಳಿತ ಸಚಿವ ರಹೀಂಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





