ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 11ರಿಂದ 15ರವರೆಗೆ ಆರೋಗ್ಯ ಇಲಾಖೆ ವೈದ್ಯರು, ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ತಿಳಿಸಿದೆ.
ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಹಲವಾರು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಮಾ.11 ರಿಂದ 15ರವರೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಔಷಧಾಲಯಗಳ ಸಿಬ್ಬಂದಿ ಮುಷ್ಕರ ಕೈಗೊಳ್ಳಲಿದ್ದಾರೆ. ವೈದ್ಯರು, ಅಧಿಕಾರಿಗಳು ಮತ್ತು ನೌಕರರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.
“ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಗುತ್ತದೆ. ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮಾ.16ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.
“ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಕಾಲಕ್ಕೆ ಔಷಧಿ ವಿತರಣೆಯಾಗದಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿಯಾಗಬೇಕು. 1997ರಿಂದ ಈವರೆಗೆ ನಿಯಮ ತಿದ್ದುಪಡಿಯಾಗಿಲ್ಲ. ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆ 67 ಸಾವಿರದಷ್ಟಿದೆ. ಆದರೆ 37,620 ಹುದ್ದೆಗಳು ಖಾಲಿಯಿವೆ. ಇದರಿಂದ ಅಧಿಕಾರಿಗಳು, ನೌಕರರು ನಾನಾ ಹುದ್ದೆಗಳ ಜವಾಬ್ದಾರಿ ನಿಭಾಯಿಸಬೇಕಿದೆ. ಐದು ವರ್ಷಗಳಿಂದ ಜೇಷ್ಠತಾ ಪಟ್ಟಿ ಪ್ರಕಟಿಸದ್ದಕ್ಕೆ ಬಡ್ತಿ ದೊರೆತ್ತಿಲ್ಲ” ಎಂದು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ
“ಸೇವಾನಿರತ ವೈದ್ಯರು, ಅಧಿಕಾರಿಗಳು, ನೌಕರರು ಉನ್ನತ ವ್ಯಾಸಂಗ ಕೈಗೊಳ್ಳಲು ಅವಕಾಶ ದೊರೆತಿಲ್ಲ. ವರ್ಗಾವಣೆ ಕಾಯಿದೆ ಸರಿಪಡಿಸುವ ಬದಲು ಅವೈಜ್ಞಾನಿಕ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಎನ್ ಕೇಡರ್ ಹುದ್ದೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ನೇಮಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.





