ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ಬೆಂಗಳೂರು ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಪೊಲೀಸರ ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯನಿರ್ವಹಿಸಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿಯಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಸಮಾಜದ ಶಾಂತಿ ಕದಡುವಂತಹ ಪೋಸ್ಟ್‌ಗಳನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಸಮಾಜದ ಶಾಂತಿ ಹಾಳು ಮಾಡುವವರ ವಿರುದ್ಧ ಪೊಲೀಸರು ಹೆಚ್ಚಿನ ನಿಗಾ ವಹಿಸಲಿದ್ದು, ಪೊಲೀಸ್ ಠಾಣೆಗಳಲ್ಲಿ ಇಬ್ಬರು ಸಿಬ್ಬಂದಿ ಒಳಗೊಂಡು ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯ ನಿರ್ವಹಿಸಲಿದೆ. ನಗರದಾದ್ಯಂತ ಎಲ್ಲ ಠಾಣೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಡಲಿದ್ದಾರೆ.
“ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ನಾನಾ ರೀತಿಯಲ್ಲಿ ಉತ್ತೇಜನವಾಗುವಂತಹ ಪೋಸ್ಟ್‌ಗಳನ್ನು ಪ್ರಕಟ ಮಾಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಾನಿಟರ್ ಮಾಡಲು ಪ್ರತಿ ಡಿಸಿಪಿ ಕಚೇರಿಗಳಲ್ಲಿ ತಂಡ ರಚನೆ ಮಾಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪರಿಣಿತರ ದೊಡ್ಡ ತಂಡವನ್ನು ರಚನೆ ಮಾಡಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.
“ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ಹಾಗೂ ಫೇಕ್ ಪೋಸ್ಟ್‌ಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನದ ಸಹಾಯದಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಾಂತ್ರಿ ಪರಿಣಿತ ಇರುವ ಸಿಬ್ಬಂದಿ ನೇಮಕ ಮಾಡಲಾಗಿದೆ. ವಿಶೇಷ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.




