7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯ ಮೇಲೆ ಇಬ್ಬರು ಕಾಮುಕಾರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ತೆರಳಿದ್ದ ಸಮಯದಲ್ಲಿ ಆರೋಪಿಗಳನ್ನು ಆಕೆಯನ್ನು ಅಪಹರಿಸಿದ್ದಾರೆ. ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ಕೃತ್ಯ ಎಸಗಿದ ಆರೋಪಿಗಳನ್ನು ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ್ ಎಂದು ಹೆಸರಿಸಲಾಗಿದೆ. ಆರೋಪಿಗಳು ನವೆಂಬರ್ 23ರಂದು ಕೃತ್ಯ ಎಸಗಿದ್ದು, ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆ, ಬಾಲಕಿಯ ಕುಟುಂಬಸ್ಥರು ದೂರು ನೀಡಲು ನಿರಾಕರಿಸಿದ್ದರು ಎಂದು ಹೇಳಲಾಗಿದೆ.
ಇದೀಗ, ಬಾಲಕಿಯ ಪೋಷಕರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.




