ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡುವಂತೆ ಆಗ್ರಹಿಸಿ ರೈತರು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ ₹3,500 ನೀಡಬೇಕೆಂದು ಆಗ್ರಹಿಸುತ್ತಿರುವ ರೈತರು ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಮುಗಿದಿದ್ದು, ಸರ್ಕಾರದಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ–4 ಬಂದ್ ಮಾಡಲು ನಿರ್ಧರಿಸಿದ್ದಾರೆ. ಪಂಜಾಬ್ ಮಾದರಿಯ ಹೋರಾಟಕ್ಕೂ ರೈತರು ಸಜ್ಜಾಗಿದ್ದಾರೆ.
ಈ ಕುರಿತು ಗುರ್ಲಾಪುರ ಕ್ರಾಸ್‌ನಲ್ಲಿ ಹಸಿರು ಸೇನೆ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಮಾತನಾಡಿ, ನವೆಂಬರ್ 7ರಂದು ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದೇವೆ. ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಂಡ್ಯ, ಮೈಸೂರು, ಶಿವಮೊಗ್ಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಧರಣಿ ಹೋರಾಟ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ರೈತರ ಬೇಡಿಕೆಗೆ ಸ್ಪಂದಿಸಬೇಕು. ಹಳೆಯ ರಿಕವರಿ ಮಾದರಿಯಲ್ಲೇ ಕಬ್ಬು ಖರೀದಿಸಬೇಕು ಎಂಬುದು ರೈತರಬೇಡಿಕೆ ಎಂದು ಹೇಳಿದರು.





