ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ.
ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ. ಕಾಲೆಮಿರ್ಚಿ ಅವರು ಎಂಇಎಸ್ ಮುಖಂಡ ಶುಭಂ ಶೆಳಕೆ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಕನ್ನಡ ನಾಡಿನ ಬದ್ಧತೆ ಹಾಗೂ ತತ್ತ್ವದ ವಿರುದ್ಧ ನಡೆಯುವ ಯಾವುದೇ ಅಧಿಕಾರಿ ಅಥವಾ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಇರಲಾರದು ಎಂದು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರೂ ಈ ವಿಷಯದ ಕುರಿತು ಸ್ಪಷ್ಟನೆ ನೀಡಿದ್ದು, ಸಿಪಿಐ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪೊಲೀಸರ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕನ್ನಡ ಸಂಘಟನೆಗಳ ವಲಯದಲ್ಲಿ ಟೀಕೆ ವ್ಯಕ್ತವಾಗುತ್ತಿದೆ.





