ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ವಿಷಾಹಾರ ಸೇವನೆಯ ಘಟನೆ ನಡೆದಿದೆ. ಮಧ್ಯಾಹ್ನದ ಊಟದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಒಟ್ಟು 12 ಮಂದಿ ವಿದ್ಯಾರ್ಥಿಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಸ್ಥಳೀಯ ನ್ಯಾಯಾಧೀಶರು ಇದೇ ವಸತಿ ಶಾಲೆಗೆ ಭೇಟಿ ನೀಡಿ ನೈರ್ಮಲ್ಯ ಹಾಗೂ ನಿರ್ವಹಣಾ ಕೊರತೆಗಳ ಬಗ್ಗೆ ವಾರ್ಡನ್ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದರ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.





