ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದಲ್ಲಿ ಸುಮಾರು 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಗಾರ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ಮಂಗಳವಾರ ನಡೆದ ಬೃಹತ್ ಪ್ರತಿಭಟನ ಸಮಾವೇಶದಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರು ಸೂಕ್ತ ದರಕ್ಕಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ. ಈ ಅವಧಿಯಲ್ಲಿ 30ಕ್ಕೂ ಹೆಚ್ಚು ಕಬ್ಬು ಬೆಳೆಗಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ಘೋಷಿಸಿರುವುದು ನಿಜ. ಆದರೆ, ಅದಕ್ಕಿಂತ ಹೆಚ್ಚಿನ ದರ ನೀಡುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದು ಹೇಳಿದರು.
ಕರ್ನಾಟಕವು ಅತೀ ಹೆಚ್ಚು ಕಬ್ಬು ಬೆಳೆಯುವ ರಾಜ್ಯವಾಗಿದ್ದು, ಇದರಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹40 ಸಾವಿರ ಕೋಟಿ ಆದಾಯ ಬರುತ್ತದೆ. ಆದರೆ, ರೈತರಿಗೆ ಪ್ರತಿ ಟನ್‌ಗೆ ಕೇವಲ ₹50 ಪರಿಹಾರ ಮಾತ್ರ ಘೋಷಿಸಲಾಗಿದೆ ಎಂದು ಟೀಕಿಸಿದರು.
54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಉತ್ಪಾದನೆಯಾಗಿದ್ದರೂ ಖರೀದಿ ಕೇಂದ್ರ ತೆರೆಯಲಾಗಿಲ್ಲ. ಶೀತಲೀಕರಣ ಘಟಕಗಳನ್ನು ಸ್ಥಾಪಿಸಲಾಗಿಲ್ಲ. ಕಲಬುರಗಿ ಜಿಲ್ಲೆಯಲ್ಲಿ 6.5 ಲಕ್ಷ ಟನ್ ತೊಗರಿ ಬೆಳೆಯಲಾಗಿದೆ. ಅಡಕೆಗೆ ಚುಕ್ಕೆ ರೋಗ ಬಂದರೂ ಸರ್ಕಾರ ಯಾವುದೇ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಜನರ ಆಕ್ರೋಶದ ಭಯದಿಂದ ಮುಖ್ಯಮಂತ್ರಿ ಹಾಗೂ ಸಚಿವರು ಈಗ ಹೆಲಿಕಾಪ್ಟರ್‌ನಲ್ಲಿ ಸಂಚರಿಸುತ್ತಿದ್ದಾರೆ. ಹಿಂದೆ ಯಡಿಯೂರಪ್ಪ ಅವರು ಎಲ್ಲ ರೈತ ಹೋರಾಟಗಳಿಗೂ ಹಗಲು-ರಾತ್ರಿ ಕಣಕ್ಕಿಳಿಯುತ್ತಿದ್ದರು. ಈಗಲೂ ಬಿಜೆಪಿ ಅದೇ ರೈತಪರ ದಾರಿಯಲ್ಲಿ ಸಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಕಾಂಗ್ರೆಸ್–ಬಿಜೆಪಿ ಅವಧಿಯಲ್ಲಿ ರೈತರ ಆತ್ಮಹತ್ಯೆ: ಅಂಕಿ ಅಂಶಗಳಲ್ಲಿ ವ್ಯತ್ಯಾಸ
ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2,400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಸಂಖ್ಯೆಯನ್ನು 2,500 ಎಂದು ಹೇಳಿರುವುದರಿಂದ, ಬಿಜೆಪಿ ನಾಯಕರ ಹೇಳಿಕೆಗಳಲ್ಲೇ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಕಂಡುಬಂದಿದೆ.
ಇದರ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 2,082 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಧಿಕೃತ ಅಂಕಿ ಅಂಶಗಳೂ ಲಭ್ಯವಿವೆ. ವರ್ಷವಾರು ವಿವರ ಹೀಗಿದೆ:
2020–21: 855 ರೈತರು
2021–22: 917 ರೈತರು
2022–23: 310 ರೈತರು
ಈ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳ ಆಡಳಿತಾವಧಿಯಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ ಎಂಬುದು ಸ್ಪಷ್ಟವಾಗುತ್ತದೆ.
ರಾಜಕೀಯ ನಾಯಕರ ನಡುವೆ ನಡೆಯುತ್ತಿರುವ ಆರೋಪ–ಪ್ರತ್ಯಾರೋಪಗಳ ನಡುವೆ, ರೈತರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ವಿಫಲವಾಗುತ್ತಿವೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.





