ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು ಅಪ್ರಾಪ್ತ ಬಾಲಕನೊಬ್ಬ ದೇವಸ್ಥಾನದಲ್ಲೇ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಗೋಕಾಕ ತಾಲೂಕಿನ ರಾಜಾಪುರ ಗ್ರಾಮದ ಮಂಜುನಾಥ ಸುಭಾಷ್ ಎಣ್ಣೆ (23) ಮೃತ ಯುವಕ. ಮಂಜುನಾಥ ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಬಾಲಕನ ಸಹೋದರಿಯನ್ನು ಪ್ರೀತಿಸುತ್ತಿದ್ದನೆಂದು ತಿಳಿದುಬಂದಿದೆ. ಈ ಸಂಬಂಧವನ್ನು ವಿರೋಧಿಸಿದ್ದ ಅಪ್ರಾಪ್ತ ಬಾಲಕ, ತನ್ನ ತಂಗಿಯೊಂದಿಗೆ ಸಂಪರ್ಕ ಕಡಿದುಕೊಳ್ಳುವಂತೆ ಮಂಜುನಾಥಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ.
ರಾಜಾಪುರ ಗ್ರಾಮದ ಚೂನಮ್ಮ ದೇವಿಯ ದೇವಸ್ಥಾನದಲ್ಲಿ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ, ಸೋಮವಾರ ಬೆಳಗ್ಗೆ ಎಂದಿನಂತೆ ಪೂಜೆಗೆ ದೇವಾಲಯಕ್ಕೆ ಬಂದಿದ್ದನು. ಈ ವೇಳೆ ಪೂರ್ವಯೋಜಿತವಾಗಿ ಅಪ್ರಾಪ್ತ ಬಾಲಕ, ದೇವಸ್ಥಾನದಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡು ಕಬ್ಬಿಣದ ರಾಡ್‌ನಿಂದ ಮಂಜುನಾಥನ ತಲೆಗೆ ಬಲವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ಪಡೆದ ಘಟಪ್ರಭಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯಾದ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.




