ಸ್ಲಂ ಜನರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಅಧಿವೇಶನದ ನಂತರ ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆಯಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಳಗಾವಿಯಲ್ಲಿ ಭರವಸೆ ನೀಡಿದರು.
ಸ್ಲಂ ಜನಾಂದೋಲನ ಕರ್ನಾಟಕದ ನಿಯೋಗವು ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವರನ್ನು ಘೇರಾವ್ ಹಾಕಿ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಖಾಸಗಿ ಮಾಲೀಕತ್ವದಲ್ಲಿರುವ 709 ಕೊಳಚೆ ಪ್ರದೇಶಗಳನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.
ಖಾಸಗಿ ಕೊಳಚೆ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆಯ ಸುತ್ತೋಲೆಯನ್ನು ವಾಪಸ್ ಪಡೆಯಲಾಗುವುದು. ಸ್ಲಂ ಜನಾಂದೋಲನ ಸಂಘಟನೆ ಸಲ್ಲಿಸಿರುವ ಪ್ರಮುಖ ಹಕ್ಕೋತ್ತಾಯಗಳ ಕುರಿತು ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಸ್ಲಂ ಜನರಿಗೆ ಭೂಮಿ ಮತ್ತು ವಸತಿ ನೀಡಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ವಸಂತ್ ಕುಮಾರ್, ರಾಯಚೂರು ಶಾಸಕ ಡಾ. ಶಿವರಾಜ್ ಪಾಟೀಲ್, ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಸೇರಿದಂತೆ ವಿವಿಧ ಜಿಲ್ಲೆಗಳ ಸಂಚಾಲಕರು ಭಾಗವಹಿಸಿದ್ದರು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.





