ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ವಿಶ್ವನಾಥ ಶಿರೋಳ (44) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ಬೆನ್ನು ಹತ್ತಿದರಿಂದ ಗಾಬರಿಗೊಂಡ ಸವಾರ ಮನೆಯ ಗೋಡೆಗೆ ಬೈಕ್ ಗುದ್ದಿದ್ದಾನೆ.
ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಬೈಕ್ ಸವಾರರು ಹಾಗೂ ಶಾಲಾ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಕುರಿತು ಪುರಸಭೆಗೆ ಅನೇಕ ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ತಾಲೂಕು ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.




