ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ನಿಂಗರಾಜ ಕರೆಣ್ಣವರ ಅವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಲಕ್ಷ್ಮಣ ಸವದಿ ಅವರ ಕೆಲ ಬೆಂಬಲಿಗರ ವಿರುದ್ಧವೂ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ನಡುವೆ, ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಅವರ ಬೆಂಬಲಿಗರು ಅಥಣಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಪ್ರಕರಣವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.





