ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಿಂದ ರೈತರಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘವು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಮನವಿ ಸಲ್ಲಿಸಿತು.
ಪ್ರಸ್ತುತ ರೈತರಿಗೆ ಪ್ರತಿ ಎಕರೆಗೆ ₹20,000 ರಿಂದ ₹40,000 ವರೆಗೆ ಮಾತ್ರ ಸಾಲ ನೀಡಲಾಗುತ್ತಿದ್ದು, ಜಾಗತಿಕ ವಿದ್ಯಮಾನಗಳಿಂದ ಕೃಷಿ ಉಪಕರಣಗಳು, ಬಿತ್ತನೆ ಬೀಜ, ಗೊಬ್ಬರ, ಔಷಧಿ ಹಾಗೂ ಕೂಲಿ ದರಗಳಲ್ಲಿ ಗಣನೀಯ ಏರಿಕೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಈ ಮೊತ್ತ ಸಾಲದಾಗುತ್ತಿಲ್ಲ. ಹೀಗಾಗಿ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹1 ಲಕ್ಷದಿಂದ ₹1.5 ಲಕ್ಷದವರೆಗೆ ಸಾಲ ನೀಡಬೇಕೆಂದು ರೈತ ಸಂಘ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘಟನೆಯ ಬಸವರಾಜ ಮೋಕಾಶಿ, “ಎಲ್ಲ ಖರ್ಚು ವೆಚ್ಚಗಳು ಹೆಚ್ಚಾಗಿರುವ ಸಂದರ್ಭದಲ್ಲಿ ₹40,000 ಸಾಲವು ರೈತರಿಗೆ ಸಾಕಾಗುವುದಿಲ್ಲ. ಬೇಡಿಕೆಯನ್ನು ಈಡೇರಿಸದಿದ್ದರೆ ಜಿಲ್ಲೆಯ ಎಲ್ಲಾ ಗ್ರಾಮೀಣ ರೈತರೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರಾದ ಭೀರಪ್ಪ ದೇಶನೂರ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.





