ರೈತರು ಪೂರೈಸುವ ಕಬ್ಬಿನ ತೂಕದಲ್ಲಿ ಮೋಸ ನಡೆದಿರುವುದು ಸಾಬೀತಾದರೆ, ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಅಗತ್ಯವಿದ್ದರೆ ಅಂತಹ ಕಾರ್ಖಾನೆಗಳನ್ನು ಸ್ಥಗಿತಗೊಳಿಸುವ ಕ್ರಮಕ್ಕೂ ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯ ವೇಳೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಿತ ಕಾಯುವುದು ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಎಲ್ಲ ಕಾರ್ಖಾನೆಗಳಲ್ಲೂ ಡಿಜಿಟಲ್ ವೇ-ಬ್ರಿಡ್ಜ್ ವ್ಯವಸ್ಥೆ ಅಳವಡಿಸಲಾಗಿದೆ. ಈ ವರ್ಷ ಸರ್ಕಾರದಿಂದಲೇ 12 ಸಕ್ಕರೆ ಕಾರ್ಖಾನೆಗಳಲ್ಲಿ ಆಧುನಿಕ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕಬ್ಬು ತೂಕದಲ್ಲಿ ಮೋಸ ನಡೆದಿರುವ ಬಗ್ಗೆ ರೈತರು ದೂರು ಸಲ್ಲಿಸಿ ಅದು ಸಾಬೀತಾದಲ್ಲಿ, ಮೊದಲಿನಿಂದ ಘೋಷಿಸಿದ್ದ 2 ಲಕ್ಷ ರೂ. ಬಹುಮಾನವನ್ನು ಇದೀಗ 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಘೋಷಿಸಿದರು. ಯಾವುದೇ ಕಾರ್ಖಾನೆಯವರೇ ಆಗಿರಲಿ, ಎಷ್ಟೇ ಪ್ರಭಾವಿಗಳಾಗಿರಲಿ, ತಪ್ಪಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.
ಇದನ್ನೂ ಓದಿ: ಬೆಳಗಾವಿ | ಹೆಚ್ಚುತ್ತಿರುವ ಸೈಬರ್ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ
ಸರ್ಕಾರ ಆಧುನಿಕ ತೂಕದ ಯಂತ್ರ ಅಳವಡಿಸಲು ಮುಂದಾದಾಗ ಕೆಲ ಕಾರ್ಖಾನೆ ಮಾಲೀಕರು ಅನುಮತಿ ನೀಡುತ್ತಿಲ್ಲ. ಇದರಿಂದ ಸಮಸ್ಯೆ ಉಂಟಾಗಿದ್ದು, ರೈತರಿಗೆ ಅನ್ಯಾಯವಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.




