ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತದೇಹ ಮೆಕ್ಕೆಜೋಳದ ಗದ್ದೆಯಲ್ಲಿ ಪತ್ತೆಯಾಗಿ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ.
ಮೃತರನ್ನು ಅದೇ ಗ್ರಾಮದ ಕಛೇಶ್ ಕೋಟಿ (50) ಎಂದು ಗುರುತಿಸಲಾಗಿದೆ. ಅವರು ತುಮಕೂರುದಲ್ಲಿ ಹೋಮ್ ಕೇರ್ ನೌಕರರಾಗಿದ್ದು, ಸುಮಾರು ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವ ಸಾಧ್ಯತೆ ಇದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೊಲಕ್ಕೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆ ಪ್ರಕಾರ, ದುಷ್ಕರ್ಮಿಗಳು ಕಛೇಶ್ ಅವರನ್ನು ಮಾರಕಾಸ್ತ್ರಗಳಿಂದ ಕ್ರೂರವಾಗಿ ಹತ್ಯೆಗೈದು ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಷಮ್ಯ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆ ಇರುವ ಸಾಧ್ಯತೆ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ದೇವರೆ ನನ್ನ ಅತ್ತೆ ಸಾಯಲಿ ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿ
ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.




