ಗರ್ಭಿಣಿ ಪತ್ನಿಗೆ ಚಾಕು ಇರಿದು ಬಳಿಕ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಟುಂಬ ಮೂಲಗಳ ಪ್ರಕಾರ, ಉಮೇಶ ಸಾರಾಯಿ ಕುಡಿದು ಮನೆಗೆ ಬಂದು ಪತ್ನಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಮೊನ್ನೆ ನಡೆದ ಜಗಳ ತೀವ್ರ ಸ್ವರೂಪ ಪಡೆದಿದ್ದು, ಕೋಪೋದ್ರಿಕ್ತನಾದ ಉಮೇಶ ಪತ್ನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಚಾಕು ಇರಿತದಿಂದ ಗಾಯಗೊಂಡ ಗರ್ಭಿಣಿ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆಕೆಯ ಸ್ಥಿತಿ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಉಮೇಶ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿ
ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕುಟುಂಬ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.




