ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕೋ ನ್ಯಾಯಾಲಯವು 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
ಬೆಳಗಾವಿ ಸಮರ್ಥ ನಗರದ ನಿವಾಸಿ ವಿಶಾಲ ಹೊಸಮನಿ (22) ಶಿಕ್ಷೆಗೊಳಗಾದ ಅಪರಾಧಿ. 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದನು. ಬಳಿಕ 2024ರಲ್ಲಿ ಆಕೆಯನ್ನು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಲಾಡ್ಜ್‌ನಲ್ಲಿ ಅಕ್ರಮವಾಗಿ ಇರಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಆರೋಪಿಯ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕೋ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ, ಆರೋಪಗಳು ಸಂಶಯಾತೀತವಾಗಿ ಸಾಬೀತಾಗಿವೆ ಎಂದು ತೀರ್ಪು ಪ್ರಕಟಿಸಿದರು.
ಇದೇ ವೇಳೆ, ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದರು.




