ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ನಗರದ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಬೀದಿ ಬದಿಯ ಅಂಗಡಿಯ ಪಕ್ಕದ ಫುಟ್‌ಪಾತ್ ಮೇಲೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಅಂಗಡಿ ಪಕ್ಕದಲ್ಲೇ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಾಗೂ ಸಾವಿನ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.




