ರಾಜ್ಯದಲ್ಲಿ ಬೇಸಿಗೆಯ ಮಧ್ಯೆ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿದಿದ್ದು, ಮತ್ತೊಂದು ಜೀವ ಬಲಿಯಾಗಿದೆ. ನಿನ್ನೆ ಬಳಿಕ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲವೆಡೆ ಆಲಿಕಲ್ಲು ಮಳೆಯೂ ಸುರಿದಿದೆ.
ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಾಳು ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 34 ವರ್ಷದ ಪರ್ವಿನ್ ಬೇಪಾರಿ ಎಂದು ಗುರುತಿಸಲಾಗಿದೆ. ಪತಿ ಶರೀಫ್ ಬೇಪಾರಿ ಅಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್‌ನಲ್ಲಿ ತೆರಳುತ್ತಿದ್ದರು. ಮಳೆ ಹೆಚ್ಚಾದ ಕಾರಣ ಪಾಳು ಮನೆಯ ಕೆಳಗೆ ಆಶ್ರಯ ಪಡೆದಿದ್ದರು. ಇದೇ ವೇಳೆ ಗೋಡೆ ಏಕಾಏಕಿ ಕುಸಿದು ಬಿದ್ದು, ಪರ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಗೊಂಡ ಶರೀಫ್ ಬೇಪಾರಿ ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.




