ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ತಡರಾತ್ರಿ ನಡೆದ ತಲವಾರ ದಾಳಿಯಿಂದ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದತ್ತಾ ಥೋರವಾತ್ (40) ಎಂಬ ಯುವಕನ ಮೇಲೆ ಅನಾಮಧೇಯ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಮಾಹಿತಿ ಪ್ರಕಾರ, ದುಷ್ಕರ್ಮಿಗಳು ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುವನ್ನು ತಕ್ಷಣವೇ ಗಡಹಿಂಗ್ಲಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಾಳಿಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವೇ ಬಹಿರಂಗವಾಗಲಿದೆ




