ಬೆಳಗಾವಿ ನಗರದ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾರ್ಚ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ (KSLRPS), ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇರ್ ಅಧ್ಯಕ್ಷತೆ ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವ `ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಡಾ. ಶರಣಪ್ರಕಾಶ ಪಾಟೀಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
100ಕ್ಕೂ ಹೆಚ್ಚು ಕಂಪನಿಗಳು
ಉದ್ಯೋಗ ಮೇಳದಲ್ಲಿ ಬೆಳಗಾವಿ, ಹುಬ್ಬಳ್ಳಿ ಹಾಗೂ ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ಕಂಪನಿಗಳು ಇರುತ್ತವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಹುಲ್ ಶಿಂಧೆ ತಿಳಿಸಿದ್ದಾರೆ.




