ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.
ಮೃಣಾಲ್ ಅವರ ಕಾರು ಚಾಲಕನಾಗಿರುವ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್ (32) ಅವರು ಮಧ್ಯಾಹ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಸವಂತ ಕಡೋಲ್ಕರ್ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿಷಯ ತಿಳಿದ ಕೂಡಲೇ ಮೃಣಾಲ್ ಹೆಬ್ಬಾಳ್ಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವಂತ ಅವರ ಆರೋಗ್ಯ ವಿಚಾರಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.





