ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ್ ಆರವೇಕರ್ (22) ಮತ್ತು ಸಲ್ಮಾನ್ ಮುಕ್ಕೇರಿ (18) ಎಂದು ಗುರುತಿಸಲಾಗಿದೆ.
ಮತ್ತಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಟ್ರ್ಯಾಕ್ಟರ್‌ನಲ್ಲಿ ಜಗ್ಗಾಟ ಸ್ಪರ್ಧೆಗೆ ತೆರಳುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಅವಘಡದ ನಂತರ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.





