ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಪ್ರತಿ ಕ್ವಿಂಟಲ್‌ಗೆ ₹5,875 ಎಂಎಸ್‌ಪಿ ದರದಲ್ಲಿ ರೈತರಿಂದ ಕಡಲೆಕಾಳು ಖರೀದಿಸಲಾಗುತ್ತದೆ. ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದ ಮೇಲೆ ರೈತರಿಂದ ಕಡಲಡಕಾಳು ಉತ್ಪನ್ನ ಖರೀದಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದೆ. ಗೋದಾಮುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಮೂಲ ಸೌಕರ್ಯ ಒದಗಿಸಬೇಕು. ತೂಕ ಪ್ರಮಾಣಿಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ 2ರವರೆಗೆ ಉತ್ಪನ್ನ ಖರೀದಿಸಲು ಅವಧಿ ನಿಗದಿಗೊಳಿಸಲಾಗಿದೆ. ರೈತರು ನೋಂದಣಿಗೆ ಆಧಾರ್ ಕಾರ್ಡ್, ಪಹಣಿ ಪ್ರತಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಪಾಸ್‌ಬುಕ್ ಝೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್ ಸಾಬೂನು ಉತ್ಪಾದನೆ
ಮೆಕ್ಕೆಜೋಳ ನೋಂದಣಿ ಅವಧಿ ವಿಸ್ತರಣೆ
ಬಳ್ಳಾರಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ನೋಂದಣಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆಬ್ರವರಿ 13ರವರೆಗೆ ಹಾಗೂ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಮಾರಾಟ ಮಾಡಿಕೊಳ್ಳಲು ಫೆ.21 ಕೊನೆಯ ದಿನವಾಗಿದೆ ಎಂದು ಸರ್ಕಾರ ತಿಳಿಸಿದೆ.





