ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವ ಘಟನೆಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಆರೋಪಿಸಿದ್ದಾರೆ.
ತುಮಕೂರು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು, “ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಲಾಗಿತ್ತು. ಇದನ್ನು ಜನಾರ್ದನ ರೆಡ್ಡಿ ಕಡೆಯವರು ವಿರೋಧಿಸಿದ್ದು, ಬ್ಯಾನರ್ ಕಿತ್ತು ಹಾಕಿ ದಾಂಧಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಇದರಿಂದಾಗಿ ಕಾಂಗ್ರೆಸ್ ಶಾಸಕರ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸಿದ್ದು, ಗಲಾಟೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಯಾರೋ ಗುಂಡು ಹಾರಿಸಿದ್ದು, ಪರಿಣಾಮವಾಗಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ” ಎಂದು ಹೇಳಿದರು.
“ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ. ಮಹರ್ಷಿ ವಾಲ್ಮೀಕಿ ಪುತ್ಥಳಿ ವಿಚಾರದಲ್ಲಿ ಇಂತಹ ಕೃತ್ಯ ರಾಜಕೀಯ ದುರುದ್ದೇಶದಿಂದಾಗಿ ನಡೆದಿದೆ. ನಾವು ಇದನ್ನು ಸಹಿಸುವುದಿಲ್ಲ. ಘಟನೆಯ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು
“ಮುನ್ನೆಚ್ಚರಿಕೆಯಾಗಿ ದಾವಣಗೆರೆ ಐಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಗುಂಪಿನ ನಡುವೆ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಅಲ್ಲದೆ, ಖಾಸಗಿ ಗನ್‌ಮ್ಯಾನ್‌ಗಳ ರಿವಾಲ್ವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸತೀಶ್ ರೆಡ್ಡಿ ಅವರ ಗನ್‌ಮ್ಯಾನ್ ಗುಂಡು ಹಾರಿಸಿದ್ದಾರೆ ಎಂಬ ಆರೋಪವಿದ್ದು, ಇದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚಿಸಲಾಗಿದೆ” ಎಂದು ಸಚಿವರು ಹೇಳಿದರು.





