ಬೆಂಗಳೂರು ನಗರದ ಸುಬ್ರಹ್ಮಣ್ಯನಗರದಲ್ಲಿ ನೆಲಸಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಸುಪ್ರಿಯಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುಪ್ರಿಯಾ ಅವರು ಮೂಲತಃ ದಾವಣಗೆರೆಯವರಾಗಿದ್ದು, ಸುಬ್ರಹ್ಮಣ್ಯ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.
“ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸರು ಮಾಹಿತಿ ನೀಡಿದರು.
“ಸುಬ್ರಹ್ಮಣ್ಯನಗರದ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಂಬಿಎ ವ್ಯಾಸಂಗ ಮಾಡಿದ್ದರು. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದರೊಂದಿಗೆ ಬೈಕ್ ರೈಡಿಂಗ್ ತರಬೇತಿಗೂ ತೆರಳುತ್ತಿದ್ದರು. ಆದರೆ, ಇತ್ತೀಚೆಗೆ ವೈಯಕ್ತಿಕ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ” ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್ ಅರೆಸ್ಟ್: ₹1.07 ಕೋಟಿ ವಂಚನೆ
“ಸುಪ್ರಿಯಾ ಅವರು ನೆಲಸಿದ್ದ ಮನೆಯಲ್ಲಿ ವಾಸನೆ ಬರುತ್ತಿತ್ತು. ಅನುಮಾನಗೊಂಡಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಒಳಹೋಗಿ ನೋಡಿದಾಗ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಯಿತು” ಎಂದು ಮಾಹಿತಿ ನೀಡಿದ್ದಾರೆ.






